ತಲ್ಲಣಿಸದಿರು ಕಂಡ್ಯ ತಾಳು ಮನವೇ - Thallanisadiru Kandya Thaalu Manave

|| ದೇವರಾನಾಮ ||

ರಚನೆ : ಕನಕದಾಸರು




ತಲ್ಲಣಿಸದಿರು ಕಂಡ್ಯ ತಾಳು ಮನವೇ

ಎಲ್ಲರನು ಸಲಹುವನು ಇದಕೆ ಸಂಶಯ ಬೇಡ ।।ಪ॥ 

 

ಬೆಟ್ಟದ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆ

ಕಟ್ಟೆಯನು ಕಟ್ಟಿ ನೀರೆರೆದವರು ಯಾರು

ಹುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು

ಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ ।।೧।।


ಅಡವಿಯೊಳಗೆ ಮೃಗ ಪಕ್ಷಿಗಳಿಗೆಲ್ಲ 

ಅಡಿಗಡಿಗೆ ಆಹಾರವಿತ್ತವರು ಯಾರೊ 

ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿ 

ಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ ।।೨।।


ನವಿಲಿಗೆ ಚಿತ್ರ ಬರೆದವರು ಯಾರು 

ಪವಳದ ಲತೆಗೆ ಕೆಂಪಿಟ್ಟವರು ಯಾರು 

ಸವಿಮಾತಿನರಗಿಳಿಗೆ ಹಸುರು ಬರೆದವರು ಯಾರು 

ಅವನೇ ಸಲಹುವನು ಇದಕೆ ಸಂಶಯವಿಲ್ಲ ।।೩।।


ಕಲ್ಲಿನಲ್ಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲ 

ಅಲ್ಲಲ್ಲಿಗಾಹಾರವನ್ನು ತಂದಿತ್ತವರು ಯಾರು

ಬಲ್ಲಿದನು ಕಾಗಿನೆಲೆಯಾದಿಕೇಶವರಾಯ

ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ।।೪।।



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು